‘ಗಜಿನಿ’, ‘ಲಾಗಾನ್’, ‘ಸರ್ಫರೋಶ್’ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳಲ್ಲಿ ತಮ್ಮ ವಿಭಿನ್ನ ಖಳನಾಯಕ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದ ಹಿರಿಯ ನಟ ಪ್ರದೀಪ್ ರಾವತ್ ಅವರು ಮಂಗಳವಾರ (ಆಗಸ್ಟ್ 4) ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಕಳೆದ ಐದು ವರ್ಷಗಳಿಂದ ಅವರು ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಕೆಲಕಾಲ ಸುಧಾರಣೆ ಕಂಡಿದ್ದರೂ, ಇತ್ತೀಚೆಗೆ ಆರೋಗ್ಯ ಮತ್ತೆ ಹದಗೆಟ್ಟಿದ್ದು, ಮುಂಬೈ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದರು.
ಬಿ.ಆರ್. ಚೋಪ್ರಾ ಅವರ ಮಹಾಭಾರತ ಧಾರಾವಾಹಿಯಲ್ಲಿ ಅಶ್ವತ್ಥಾಮ ಪಾತ್ರದ ಮೂಲಕ ಅಭಿನಯ ಜೀವನ ಆರಂಭಿಸಿದ್ದ ಪ್ರದೀಪ್ ರಾವತ್, ನಂತರ ಹಿಂದಿ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು.
ಲಾಗಾನ್, ಗಜಿನಿ, ಸರ್ಫರೋಶ್, ಸೈ, ಛತ್ರಪತಿ, ನಾಯಕ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು.
ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಹನಟರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ. ಅಂತ್ಯಕ್ರಿಯೆ ಬುಧವಾರ ನಡೆಯುವ ಸಾಧ್ಯತೆ ಇದೆ.





