20 June 2026 |

ಬಂಟ್ವಾಳದ ಎರ್ಮಾಳಪದವು ಸರಕಾರಿ ಶಾಲೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ನೋಟ್‌ಪುಸ್ತಕ ವಿತರಣೆ

  • 19 Jun 2026 12:08:49 AM

ಬಂಟ್ವಾಳ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸರಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

 

ಅವರು ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಎರ್ಮಾಳಪದವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಪುಸ್ತಕ ಹಾಗೂ ಶೈಕ್ಷಣಿಕ ಸಾಮಗ್ರಿ ವಿತರಣಾ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.

 

"ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಮುಖ ಸಾಧನವಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ನೆರವು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ" ಎಂದು ಅವರು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ನಾಗರಿಕರಾಗಬೇಕು ಎಂದು ಕರೆ ನೀಡಿದರು.

 

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಪುಸ್ತಕಗಳು ಹಾಗೂ ವಿವಿಧ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು.

 

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.