ಬಿ.ಸಿ.ರೋಡ್: ಬಂಟ್ವಾಳ ತಾಲೂಕಿನ ಬಿ.ಸಿ ರೋಡಿನ ಕೃಷಿಕ ಸಮಾಜದ ಕಟ್ಟಡದಲ್ಲಿ ಇಂದು (ಸೆಪ್ಟೆಂಬರ್ 5, ಶುಕ್ರವಾರ) ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ನೂತನ ಸ್ಥಳಾಂತರಿತ ಕೇಂದ್ರ ಕಚೇರಿಯನ್ನು ಉದ್ಘಾಟಿಸಲಾಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟನೆ ನೆರವೇರಿಸಿದರು. ಸಮಾರಂಭದಲ್ಲಿ ಮಹಾಮಂಡಲದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ. ರಮಾನಾಥ ರೈ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲೊಟ್ಟು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
ಸಂಸ್ಥೆಯು 80 ವರ್ಷಗಳ ಇತಿಹಾಸ ಹೊಂದಿದ್ದು, ವರದಿ ಸಾಲಿನಲ್ಲಿ 30 ಕೋಟಿ ರೂ. ವ್ಯವಹಾರ ನಡೆಸಿ, 9 ಕೋಟಿ ರೂ. ಠೇವಣಿ ಹೊಂದಿದೆ. ಒಟ್ಟು 5.19 ಕೋಟಿ ರೂ. ಸಾಲ ವಿತರಣೆ ಮಾಡಿದೆ. ಪ್ರಸ್ತುತ ದ.ಕ. ಜಿಲ್ಲೆಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಮಹಾಮಂಡಲವು ಮುಂದಿನ ದಿನಗಳಲ್ಲಿ ವಿವಿಧ ತಾಲೂಕುಗಳಲ್ಲಿ ಹೊಸ ಶಾಖೆಗಳನ್ನು ತೆರೆದು ಸೇವೆ ವಿಸ್ತರಿಸುವ ಯೋಜನೆ ಹೊಂದಿದೆ.