13 June 2026 |

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌: ಅರ್ಜಿ ಸಲ್ಲಿಕೆಗೆ ಸರ್ಕಾರದ ಸೂಚನೆ

  • 12 Jun 2026 02:12:16 PM

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಹೊಸ ಯೋಜನೆಗೆ ಸಾರಿಗೆ ಸಚಿವ ಬೈರತಿ ಸುರೇಶ್ ಚಾಲನೆ ನೀಡಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವ ಉದ್ದೇಶ ಹೊಂದಿದೆ ಎಂದು ತಿಳಿಸಿದ್ದಾರೆ.

 

ಈ ಯೋಜನೆಯಡಿ ಈಗಾಗಲೇ ಶುಲ್ಕ ಪಾವತಿಸಿ ಬಸ್‌ ಪಾಸ್‌ ಪಡೆದಿರುವ ವಿದ್ಯಾರ್ಥಿಗಳಿಗೆ ಅವರು ಕಟ್ಟಿದ ಮೊತ್ತವನ್ನು ಮರುಪಾವತಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದುವರೆಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ವಿದ್ಯಾರ್ಥಿನಿಯರಿಗೆ ಮಾತ್ರ ಲಭ್ಯವಿದ್ದರೆ, ಇದೀಗ ಗಂಡು ವಿದ್ಯಾರ್ಥಿಗಳಿಗೂ ಅದನ್ನು ವಿಸ್ತರಿಸಲಾಗಿದೆ.

 

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಉಚಿತ ಬಸ್‌ ಪಾಸ್‌ ವಿತರಣೆಗೆ ಸಂಬಂಧಿಸಿದ ಅಗತ್ಯ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

 

ಕುಟುಂಬದ ಆರ್ಥಿಕ ಪರಿಸ್ಥಿತಿ ಯಾವುದೇ ಆಗಿರಲಿ, ಪ್ರತಿಯೊಬ್ಬ ವಿದ್ಯಾರ್ಥಿಗೂ ಶಿಕ್ಷಣ ಪಡೆಯುವ ಅವಕಾಶ ಸುಲಭವಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ಹೇಳಿದ್ದಾರೆ.

 

ವಿದ್ಯಾರ್ಥಿಗಳು ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ನಿಗದಿತ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಅರ್ಜಿಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಲಾಗಿದೆ.