ಮಂಗಳೂರು: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷಗಳ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಮರುಸ್ಥಾಪನೆಗಾಗಿ ನೇಮಕಗೊಂಡಿದ್ದ ದಕ್ಷ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಕುರಿತು ಉಂಟಾಗಿರುವ ಗೊಂದಲದ ಬಗ್ಗೆ ಎಂದು ಕಾಂಗ್ರೆಸ್ ನಾಯಕ ಪದ್ಮರಾಜ್ ಪೂಜಾರಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮು ಅಶಾಂತಿಯಿಂದ ಜಿಲ್ಲೆಯ ಕಾನೂನು ವ್ಯವಸ್ಥೆ ತೀವ್ರವಾಗಿ ಹದಗೆಟ್ಟ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಡಾ. ಅರುಣ್ ಅವರನ್ನು ನೇಮಕ ಮಾಡಿತು. ಅವರ ದಕ್ಷ ಕಾರ್ಯಪಟುತೆಯಿಂದ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ವ್ಯವಸ್ಥೆ ಮರುಸ್ಥಾಪನೆಯಾಯಿತು ಎಂದು ಪ್ರಶಂಸಿಸಿದರು.
ಇಂತಹ ಸಮರ್ಥ ಹಾಗೂ ನಿಷ್ಠಾವಂತ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ವರ್ಗಾವಣೆ ಮಾಡುವುದಿಲ್ಲ. ಆದರೆ ಬಿಜೆಪಿ ನಾಯಕರು ಕೆಲವೊಂದು ಧಾರ್ಮಿಕ ವಿಚಾರಗಳನ್ನು ಮುಂದಿಟ್ಟು, ಉದ್ದೇಶಪೂರ್ವಕವಾಗಿ ಈ ಅಧಿಕಾರಿಗಳ ವರ್ಗಾವಣೆ ಕುರಿತಂತೆ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಪದ್ಮರಾಜ್ ಪೂಜಾರಿ ಆರೋಪಿಸಿದರು.
ಜಿಲ್ಲೆಯಲ್ಲಿ ಎಲ್ಲಾ ರೀತಿಯ ಕಾನೂನು ವ್ಯವಸ್ಥೆ ತುಂಬಾ ಉತ್ತಮ ರೀತಿಯಲ್ಲಿದೆ. ಜಿಲ್ಲೆಯಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.





