ದೆಹಲಿ : ಬೆಲೆ ಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಯಾಕೆ ಪ್ರತಿಭಟನೆ ಮಾಡುತ್ತಿಲ್ಲ ಎಂದು ತಿರಿಗೇಟು ನೀಡಿದ್ದಾರೆ.
ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಹೇಳುತ್ತಾ ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ? ನಾವು ಹಳ್ಳಿಗಳಿಗೆ ಹೋದ ಸಂದರ್ಭದಲ್ಲಿ ಪಾಪ ನಮಗೆ ರೈತರು ಹೊಡೆಯಲಿಲ್ಲ ಅಷ್ಟೇ, ಅನೇಕ ರೈತರು ಹಸುಗಳನ್ನು ಮಾರಾಟ ಮಾಡಲು ಹೊರಟಿದ್ದರು. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ ಎಂದು ಹೇಳಿದರು.
ಬೆಲೆ ಏರಿಕೆ ಬಗ್ಗೆ ಬಿಜೆಪಿ ಮಾಡುತ್ತಿರುವ ಧರಣಿ ಹಾಗೂ ರಸ್ತೆತಡೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಈ ವಿಚಾರ ತಿಳಿಸಿದರು. ಬಿಜೆಪಿ ಮತ್ತು ಜೆಡಿಎಸ್ ಒಂದೇ ನಾಣ್ಯದ 2 ಮುಖಗಳು, ಇದರ ಬಗ್ಗೆ ಸುಮ್ಮನೆ ಚರ್ಚೆ ಏಕೆ? ಬಿಜೆಪಿಯವರ ಪ್ರತಿಭಟನೆಗೆ ನಾನು ಶುಭಕೋರುತ್ತೇನೆ. ಅವರು ಪಕ್ಷ ಉಳಿಸಿಕೊಳ್ಳಲು ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ ಎಂದರು.