ಬಂಟ್ವಾಳ: ಸೀಮಂತ ಸಮಾರಂಭದಲ್ಲಿ ಪಾಲ್ಗೊಂಡು ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಮಿನಿ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಮಂಗಳೂರು ನಿವಾಸಿ ವಿಕಾಸ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಉಳಿದ ಎಂಟು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಭ್ಯ ಮಾಹಿತಿಯಂತೆ, ಮಂಗಳೂರಿನಿಂದ ಕೆಲವರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಪ್ರದೇಶಕ್ಕೆ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಅವರು ಮಿನಿ ಬಸ್‌ನಲ್ಲಿ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದರು.
ಈ ವೇಳೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ 10ನೇ ಮೈಲು ಕಲ್ಲು ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ.
ಅಪಘಾತದ ಪರಿಣಾಮ ಬಸ್‌ನಲ್ಲಿದ್ದ ಸುಮಾರು ಒಂಬತ್ತು ಮಂದಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ವಿಕಾಸ್ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.





