ಬಂಟ್ವಾಳ, ಜೂನ್ 10: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪಾಣೆಮಂಗಳೂರು ಪ್ರೈಓವರ್ ಸಮೀಪದ ಕಲ್ಲುರ್ಟಿ ಸನ್ನಿಧಿ ಬಳಿಯ ರಸ್ತೆಯಲ್ಲಿ ನೀರು ನಿಂತು ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.
ಹಳೆಯ ಸೇತುವೆ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಆರಂಭ ಭಾಗವೇ ಸಂಪೂರ್ಣವಾಗಿ ನೀರಿನಿಂದ ಆವರಿಸಲ್ಪಟ್ಟಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ರಸ್ತೆಯ ಮೇಲೆ ನೀರು ತುಂಬಿಕೊಂಡಿರುವುದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಕಾರು ಚಾಲಕರು ಎಚ್ಚರಿಕೆಯಿಂದ ಸಂಚರಿಸುವಂತಾಗಿದೆ. ಕೆಲವೆಡೆ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿರುವ ದೃಶ್ಯ ಕಂಡುಬರುತ್ತಿದೆ.
ಪಾದಚಾರಿಗಳ ಪರಿಸ್ಥಿತಿಯೂ ದುಸ್ತರವಾಗಿದ್ದು, ರಸ್ತೆ ದಾಟಲು ಸಾರ್ವಜನಿಕರು ಪರದಾಡುತ್ತಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿದಿನ ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದೆ. ಮಳೆಯ ನೀರು ಸರಿಯಾಗಿ ಹರಿದು ಹೋಗದ ಕಾರಣ ಸಮಸ್ಯೆ ಮತ್ತಷ್ಟು ಗಂಭೀರಗೊಂಡಿದೆ.
ಇದರ ಜೊತೆಗೆ, ರಸ್ತೆಯ ಎರಡೂ ಬದಿಯಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳಿಗೂ ತೊಂದರೆ ಎದುರಾಗಿದೆ. ಗ್ರಾಹಕರು ಅಂಗಡಿಗಳಿಗೆ ತಲುಪಲು ಕಷ್ಟಪಡುತ್ತಿದ್ದು, ವ್ಯಾಪಾರ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ. ಸ್ಥಳೀಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ನೀರು ಹರಿಯುವ ವ್ಯವಸ್ಥೆಯನ್ನು ಸುಧಾರಿಸಬೇಕೆಂದು ಒತ್ತಾಯಿಸಿದ್ದಾರೆ.
ಮಳೆ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆ ಇರುವುದರಿಂದ, ಸ್ಥಳೀಯ ಆಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.





