22 June 2026 |

ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್

  • 11 Jun 2026 09:38:44 AM

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ದೇವರ ದರ್ಶನಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಜೂನ್ 12ರಂದು ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

 

ಜೂನ್ 12ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ವಿಜಯ್, ಬಳಿಕ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. ಅದೇ ದಿನ ಮಧ್ಯಾಹ್ನ 3 ಗಂಟೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.

 

ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆ ಅವರು ಸಂಚರಿಸಲಿರುವ ರಸ್ತೆ ಮಾರ್ಗ ಹಾಗೂ ದೇವಸ್ಥಾನದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.

 

ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷದ ಸ್ಥಾಪಕ ಅಧ್ಯಕ್ಷ ಜೋಸೆಫ್ ವಿಜಯ್ ಅವರು ಭರ್ಜರಿ ಜಯ ಸಾಧಿಸಿ ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.