ಮಂಗಳೂರು/ಬೆಂಗಳೂರು: ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗುಡುಗು, ಮಿಂಚು ಹಾಗೂ ಬಿರುಸಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆಯ ಅಂದಾಜಿನ ಪ್ರಕಾರ, ಜೂನ್ 11 ಮತ್ತು 12ರಂದು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 14ರಿಂದ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗಲಿದ್ದು, ಜೂನ್ 15 ಹಾಗೂ 16ರಂದು ಮಳೆಯ ಪ್ರಮಾಣ ಇನ್ನಷ್ಟು ಇಳಿಕೆಯಾಗುವ ನಿರೀಕ್ಷೆಯಿದೆ.
ಯಾವ ಜಿಲ್ಲೆಗಳಲ್ಲಿ ಮಳೆ?
ಜೂನ್ 11ರಂದು ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ, ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಜೂನ್ 12ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.
ಇನ್ನೂ ಜೂನ್ 13 ಮತ್ತು 14ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ನಗರದ ಕೆಲ ಭಾಗಗಳಲ್ಲಿ ತುಂತುರು ಅಥವಾ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.





