ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕೊಣಾಜೆ ನಗರ ಘಟಕದ ನೇತೃತ್ವದಲ್ಲಿ ಮಂಗಳಗಂಗೋತ್ರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸುಜಿತ್, ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ಅನೇಕ ಸಮಸ್ಯೆಗಳು ಉಂಟಾಗುತ್ತಿದ್ದು, ಇದರ ಪರಿಣಾಮ ವಿದ್ಯಾರ್ಥಿಗಳ ಮೇಲೆ ಬೀಳುತ್ತಿದೆ ಎಂದು ಆರೋಪಿಸಿದರು. ಹಲವು ಬಾರಿ ಆಡಳಿತ ಮಂಡಳಿ ಹಾಗೂ ಕುಲಪತಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಆಡಳಿತ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ತಮ್ಮ ಒಂಬತ್ತು ಪ್ರಮುಖ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕೆಂದು ಒತ್ತಾಯಿಸಿದ ಅವರು, ಸಮಸ್ಯೆಗಳು ಬಗೆಹರಿಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಕುಲಪತಿಗಳು ಸ್ಥಳಕ್ಕೆ ಬಂದು ಸ್ಪಷ್ಟ ಭರವಸೆ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಹಲವು ಬಾರಿ ಭರವಸೆಗಳು ಮಾತ್ರ ದೊರೆತಿದ್ದು, ಯಾವುದೇ ಸ್ಪಷ್ಟ ಫಲಿತಾಂಶ ಕಾಣಿಸುತ್ತಿಲ್ಲ ಎಂದು ಅವರು ಹೇಳಿದರು. ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಜವಾಬ್ದಾರಿಯ ಸ್ಥಾನದಿಂದ ಹಿಂದೆ ಸರಿಯಬೇಕು ಎಂಬ ಮಾತನ್ನೂ ಪ್ರತಿಭಟನಾಕಾರರು ವ್ಯಕ್ತಪಡಿಸಿದರು.
ಈ ವೇಳೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವಿವಿಧ ಆಡಳಿತಾತ್ಮಕ ವಿಷಯಗಳಲ್ಲಿ ಪಾರದರ್ಶಕತೆ ಕೊರತೆಯಿದೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳ ದಾಖಲಾತಿ ಕುಸಿತ, ಶುಲ್ಕ ಸಂಗ್ರಹಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕೂಡ ಪ್ರಶ್ನೆ ಎತ್ತಿದರು.
ನಂತರ ಕುಲಪತಿಗಳ ಪ್ರತಿಕ್ರಿಯೆಯಿಂದ ತೃಪ್ತಿಗೊಳ್ಳದ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಲು ಮುಂದಾದಾಗ ಪೊಲೀಸರು ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಕೊಣಾಜೆ ನಗರ ಕಾರ್ಯದರ್ಶಿ ಮನು ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ನಿಹಾರ್, ಶ್ರೀಷಾ, ಅಪೇಕ್ಷಾ, ಕೇಸರಿ, ಯಶ್ರಿನ್ ಸೇರಿದಂತೆ ಹಲವರು ಭಾಗವಹಿಸಿದ್ದರು.





