ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರೆಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ಸಮಗ್ರ ಮರು ಪರಿಶೀಲನೆ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳಿಂದ ಮರು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಮಾತನಾಡಿದ ಅವರು, ಯೋಜನೆಗಳ ಸೌಲಭ್ಯಗಳು ಅರ್ಹ ವ್ಯಕ್ತಿಗಳಿಗೆ ಮಾತ್ರ ತಲುಪುವಂತೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವು ಅಕ್ರಮಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ಲಭ್ಯವಾಗಿದ್ದು, ಮೃತಪಟ್ಟವರ ಹೆಸರಿನಲ್ಲಿಯೂ ಹಣ ಜಮೆಯಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರಿಂದ ಸುಮಾರು 100 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದುರುಪಯೋಗ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ನೈಜ ಫಲಾನುಭವಿಗಳನ್ನು ಗುರುತಿಸಲು ಮರು ನೋಂದಣಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ವಿವರಿಸಿದರು.
ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಡಿ.ಕೆ. ಶಿವಕುಮಾರ್, ಯೋಜನೆಗಳ ಅನುಷ್ಠಾನದಲ್ಲಿ ಕಂಡುಬಂದಿರುವ ಲೋಪಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಮಾತ್ರ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಗೃಹಜ್ಯೋತಿ ಯೋಜನೆಯಲ್ಲಿ ಒಂದೇ ಹೆಸರಿನಲ್ಲಿ ಹಲವು ವಿದ್ಯುತ್ ಮೀಟರ್‌ಗಳಿರುವ ಪ್ರಕರಣಗಳ ಕುರಿತು ಸಹ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಗ್ಯಾರೆಂಟಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ವಿಶೇಷ ಗುರುತಿನ ಚೀಟಿಗಳನ್ನು ವಿತರಿಸುವ ಯೋಜನೆಯೂ ಸರ್ಕಾರದ ಮುಂದಿದೆ. ಇದರಿಂದ ಫಲಾನುಭವಿಗಳ ಗುರುತಿನ ಪರಿಶೀಲನೆ ಸುಲಭವಾಗಲಿದೆ ಎಂದು ತಿಳಿಸಿದರು.
ಇದರ ಜೊತೆಗೆ ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಬಳಸಿಕೊಳ್ಳುವ ಹೊಸ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಕಂಪನಿಗಳಿಂದ ಲಭ್ಯವಾಗುವ ನಿಧಿಯನ್ನು ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಬಳಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ.
ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಖಾಸಗಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು. ಜೊತೆಗೆ 16ರಿಂದ 40 ವರ್ಷದೊಳಗಿನ ಯುವಕರಿಗಾಗಿ ‘ಭಾರತ ಜೋಡೋ ಯುವಕರ ಸಂಘ’ವನ್ನು ಸ್ಥಾಪಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ರಾಜಕೀಯೇತರ ವೇದಿಕೆ ಒದಗಿಸುವ ಯೋಜನೆಯನ್ನೂ ಸರ್ಕಾರ ರೂಪಿಸಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.





