18 June 2026 |

ಗುರುಪುರ ನದಿಯಲ್ಲಿ ಅಕ್ರಮ ಮರಳು ಸಂಗ್ರಹ ಪತ್ತೆ: ಜಂಟಿ ದಾಳಿಯಲ್ಲಿ 127 ಲಾರಿ ಲೋಡ್ ಮರಳು ಜಪ್ತಿ, ಒಬ್ಬ ಆರೋಪಿ ಬಂಧನ

  • 17 Jun 2026 10:42:40 AM

ಮಂಗಳೂರು: ಗುರುಪುರ (ಫಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ತೆಗೆಯಲಾಗಿದ್ದು, ಅದನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ಮಂಗಳೂರು ನಗರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 127 ಲಾರಿ ಲೋಡ್ ಅಕ್ರಮ ಮರಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ 6.35 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

 

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗರು ಗ್ರಾಮದ ಮಳಲಿ ಸಂಕೇಶ ಪ್ರದೇಶದಲ್ಲಿ ಅನ್ವಿತ್ ಹಾಗೂ ರಾಜೇಂದ್ರ ಮೆಂಡಾ ಎಂಬವರು ನದಿಯಿಂದ ಅಕ್ರಮವಾಗಿ ಮರಳು ಸಾಗಿಸಿ ಸಂಗ್ರಹಿಸಿದ್ದಾರೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಈ ಮಾಹಿತಿ ಆಧರಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಜಂಟಿ ಕಾರ್ಯಾಚರಣೆ ಕೈಗೊಳ್ಳಲಾಯಿತು.

 

ಬಜಪೆ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ಎಚ್.ಎನ್. ಅವರ ನೇತೃತ್ವದಲ್ಲಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಪವನ್ ಹಾಗೂ ಸಿಬ್ಬಂದಿ ತಂಡ ಮಳಲಿ ಸಂಕೇಶದಲ್ಲಿರುವ ದಾಸ್ತಾನು ಪ್ರದೇಶದ ಮೇಲೆ ದಾಳಿ ನಡೆಸಿದರು.

 

ಸ್ಥಳ ಪರಿಶೀಲನೆಯ ವೇಳೆ ಆರೋಪಿಗಳು ಐದು ಪ್ರತ್ಯೇಕ ಜಾಗಗಳಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಸ್ಥಳಗಳಿಂದ ಒಟ್ಟು 127 ಲಾರಿ ಲೋಡ್ ಮರಳನ್ನು ಅಧಿಕಾರಿಗಳು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಮರಳನ್ನು ಸರ್ಕಾರದ ವಶಕ್ಕೆ ಒಪ್ಪಿಸಲಾಗಿದೆ.

 

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 303(2) ಹಾಗೂ 3(5)ರಡಿ ಪ್ರಕರಣ ದಾಖಲಾಗಿದೆ.

 

ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮೊಗರು ನಿವಾಸಿ ಅನ್ವಿತ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನೊಬ್ಬ ಆರೋಪಿ ರಾಜೇಂದ್ರ ಮೆಂಡಾ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ.