ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ತಮ್ಮ 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರು ಆರೋಗ್ಯವಂತರಾಗಿದ್ದು, ದೀರ್ಘಕಾಲ ಸುಖವಾಗಿ ಬದುಕಲಿ ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರನಾದ ರಾಹುಲ್ ಗಾಂಧಿ 1970ರ ಜೂನ್ 19ರಂದು ಜನಿಸಿದರು. ಉನ್ನತ ಶಿಕ್ಷಣಕ್ಕಾಗಿ ಅಮೆರಿಕದ ಫ್ಲೋರಿಡಾದ ರೋಲಿನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಅವರು, ನಂತರ ಬ್ರಿಟನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಟ್ರಿನಿಟಿ ಕಾಲೇಜಿನಲ್ಲಿ ಎಂ.ಫಿಲ್ ಪದವಿ ಪಡೆದರು.
ರಾಜಕೀಯ ಪ್ರವೇಶಕ್ಕೂ ಮುನ್ನ ಅವರು ಲಂಡನ್‌ನ ಮಾನಿಟರ್ ಗ್ರೂಪ್‌ನಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ, ಮುಂಬೈನಲ್ಲಿ ‘ಬ್ಯಾಕಾಪ್ಸ್ ಸರ್ವೀಸಸ್’ ಎಂಬ ತಂತ್ರಜ್ಞಾನ ಸಂಸ್ಥೆಯನ್ನೂ ಮುನ್ನಡೆಸಿದ್ದರು.





