ಮಂಗಳೂರು/ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮವನ್ನು ದೇಶ-ವಿದೇಶಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಪರಿಚಯಿಸುವ ಉದ್ದೇಶದಿಂದ ನಟ ರಿಷಬ್ ಶೆಟ್ಟಿ ಅವರನ್ನು ಪ್ರವಾಸೋದ್ಯಮ ಬ್ರಾಂಡ್ ಅಂಬಾಸಿಡರ್ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಕುರಿತ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ನಟ ರಿಷಬ್ ಶೆಟ್ಟಿ, ಕರಾವಳಿ ಭಾಗದ ಶಾಸಕರು ಹಾಗೂ ವಿವಿಧ ಕ್ಷೇತ್ರಗಳ ಉದ್ಯಮಿಗಳು ಭಾಗವಹಿಸಿ ತಮ್ಮ ಸಲಹೆಗಳನ್ನು ಸರ್ಕಾರದ ಮುಂದಿಟ್ಟರು.
ಕರಾವಳಿ ಪ್ರದೇಶದಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿರುವವರಿಗೆ ಅನುಕೂಲಕರ ವಾತಾವರಣ ನಿರ್ಮಿಸಬೇಕು. ವಿವಿಧ ಇಲಾಖೆಗಳ ಮಟ್ಟದಲ್ಲಿ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಕರಾವಳಿಯ ಸಂಸ್ಕೃತಿ, ಪರಂಪರೆ ಮತ್ತು ವೈಶಿಷ್ಟ್ಯಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಮೂಲಕ ಉದ್ಯೋಗಾವಕಾಶಗಳು ಹಾಗೂ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಆದ್ಯತೆ ನೀಡಬೇಕು ಎಂದರು.





