ಉತ್ತರಪ್ರದೇಶ: ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಂಬಂಧಿಸಿದ ದೇಣಿಗೆ ದುರ್ಬಳಕೆ ಆರೋಪದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ವಿವಿಧ ರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ನೈತಿಕ ಹೊಣೆಗಾರಿಕೆ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಆರಂಭಿಸಿತ್ತು. ತನಿಖೆಯ ಪ್ರಾಥಮಿಕ ವರದಿಯಲ್ಲಿ ದೇಣಿಗೆ ಮೇಲ್ವಿಚಾರಣೆಯಲ್ಲಿ ಲೋಪಗಳಿರುವುದು ಹಾಗೂ ನಿಗದಿತ ಕಾರ್ಯವಿಧಾನ (ಎಸ್‌ಒಪಿ) ಸಮರ್ಪಕವಾಗಿ ಅನುಸರಿಸದಿರುವುದು ಬೆಳಕಿಗೆ ಬಂದಿರುವುದಾಗಿ ವರದಿಯಾಗಿದೆ.
ಚಂಪತ್ ರಾಯ್ ಹಾಗೂ ಅನಿಲ್ ಮಿಶ್ರಾ ಅವರ ಹೆಸರುಗಳು ಎಫ್‌ಐಆರ್‌ನಲ್ಲಿ ಇಲ್ಲದಿದ್ದರೂ, ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಇಬ್ಬರೂ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿರುವುದು ಗಮನ ಸೆಳೆದಿದೆ. ಈ ಕುರಿತು ತನಿಖೆ ಇನ್ನೂ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.
1980ರ ದಶಕದಿಂದ ರಾಮಮಂದಿರ ಚಳವಳಿಯಲ್ಲಿ ಸಕ್ರಿಯ ಪಾತ್ರವಹಿಸಿದ್ದ ಚಂಪತ್ ರಾಯ್ ಅವರು ಉತ್ತರ ಪ್ರದೇಶದ ಬಿಜನೋರ್ ಮೂಲದವರು. ಆರ್‌ಎಸ್‌ಎಸ್‌ನ ಪ್ರೇರಣೆಯಿಂದ ಸಾರ್ವಜನಿಕ ಜೀವನಕ್ಕೆ ಬಂದ ಅವರು, ಚಳವಳಿಗೆ ಸೇರುವ ಮೊದಲು ರಸಾಯನಶಾಸ್ತ್ರದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. 1992ರ ಕರಸೇವೆಯಲ್ಲಿ ಪ್ರಮುಖವಾಗಿ ಭಾಗವಹಿಸಿದ್ದ ಅವರು, ಅವಿವಾಹಿತರಾಗಿದ್ದು ಸಂಘದ ಪ್ರಚಾರಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ದೇಣಿಗೆ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ತನಿಖೆ ಮುಂದುವರಿದಿದ್ದು, ಈವರೆಗೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತರಲ್ಲಿ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಕೂಡ ಸೇರಿದ್ದಾರೆ.
ವೈದ್ಯಕೀಯ ಪರೀಕ್ಷೆಯ ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಣಿಗೆ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದ್ದೆಂದು ಹೇಳಲಾಗುತ್ತಿರುವ ಸುಭಾಷ್ ಶ್ರೀವಾಸ್ತವ ಅವರನ್ನು ಸಹ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ರಾಜೀನಾಮೆ ಹಾಗೂ ತನಿಖೆಯ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.





