03 July 2026 |

'ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು': ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

  • 02 Jul 2026 11:27:27 AM

ಮಂಗಳೂರು: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಆರೋಗ್ಯಕರ ವಾತಾವರಣ ನಿರ್ಮಾಣವಾಗಲು ಪತ್ರಕರ್ತರ ಜವಾಬ್ದಾರಿಯುತ ಮತ್ತು ಪಾರದರ್ಶಕ ವರದಿಗಾರಿಕೆ ಅತ್ಯಂತ ಮುಖ್ಯವಾಗಿದೆ. ಪತ್ರಿಕೋದ್ಯಮದಲ್ಲಿ ಸ್ನೇಹಸೂಚಕ ಹಾಗೂ ಸಮಾಜಮುಖಿ ಸುದಿಗಾರರ ಪಾತ್ರ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

 

ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ ಅಂಗವಾಗಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಸತ್ಯನಿಷ್ಠೆ, ನಿಷ್ಪಕ್ಷಪಾತತೆ ಹಾಗೂ ಪಾರದರ್ಶಕತೆಯನ್ನು ತಮ್ಮ ವೃತ್ತಿಯ ಮೂಲ ಮೌಲ್ಯಗಳಾಗಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

 

ಪಾರದರ್ಶಕ ಹಾಗೂ ಜವಾಬ್ದಾರಿಯುತ ವರದಿಗಾರಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಾಧ್ಯವಾಗುತ್ತದೆ. ಆಡಳಿತ ವ್ಯವಸ್ಥೆ ಮತ್ತು ಮಾಧ್ಯಮ ಒಂದೇ ಹಾದಿಯಲ್ಲಿ ಸಾಗುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದ್ದು, ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳಲ್ಲಿ ಎರಡೂ ವ್ಯವಸ್ಥೆಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

 

ಕಾರ್ಯಕ್ರಮವನ್ನು ಉದ್ಘಾಟಿಸಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಿಕಾ ವಿತರಕರಾದ ತಿಮ್ಮಪ್ಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳ ಪ್ರಶಸ್ತಿ ಪುರಸ್ಕಾರಗಳನ್ನು ಪ್ರದಾನ ಮಾಡಲಾಯಿತು.

 

ಕಾರ್ಯಕ್ರಮದಲ್ಲಿ ಪತ್ರಿಕಾ ದಿನದ ಅಂಗವಾಗಿ ವಿಶೇಷ ಉಪನ್ಯಾಸವೂ ನಡೆಯಿತು. ಜಿಲ್ಲೆಯ ಪತ್ರಕರ್ತರು, ಪತ್ರಿಕಾ ಸಂಘದ ಪದಾಧಿಕಾರಿಗಳು, ಗಣ್ಯರು ಹಾಗೂ ವಿವಿಧ ಮಾಧ್ಯಮ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.