ತುಮಕೂರು: ಶನಿವಾರ ಎಸ್‌ಐಆರ್ (Special Intensive Revision of Electoral Rolls) ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತುಮಕೂರು ಜಿಲ್ಲೆಯ 26 ವರ್ಷದ ಗ್ರಾಮ ಆಡಳಿತಾಧಿಕಾರಿ (ವಿಎಒ) ಭುವನಾ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಗೂಳೂರು ಸಮೀಪ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಭುವನಾ ಅವರ ನಿಧನದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಕಂದಾಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಎಸ್‌ಐಆರ್ ಕಾರ್ಯಕ್ಕೆ ಸಂಬಂಧಿಸಿದ ಅತಿಯಾದ ಕೆಲಸದ ಒತ್ತಡವೇ ಈ ದುರಂತಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾನಿರತ ಸಿಬ್ಬಂದಿ ಆರೋಪಿಸಿದ್ದಾರೆ. ಕೆಲಸದ ಒತ್ತಡ ಕಡಿಮೆ ಮಾಡುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.





