ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಯೊಬ್ಬ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಆರೋಪಿಯನ್ನು ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ಎಂದು ಗುರುತಿಸಲಾಗಿದ್ದು, ಆತ ಸ್ಥಳೀಯವಾಗಿ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ.
ಮಾಹಿತಿಯ ಪ್ರಕಾರ, ವಿದ್ಯಾರ್ಥಿನಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಏಕಾಏಕಿ ಆಕೆಯ ಮೇಲೆ ಚೂರಿಯಿಂದ ದಾಳಿ ನಡೆಸಿದ್ದಾನೆ. ಈ ವೇಳೆ ಅಲ್ಲಿದ್ದ ಸಾರ್ವಜನಿಕರು ಜೋರಾಗಿ ಕೂಗುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ತೆರಳಿ ಗಾಯಾಳು ವಿದ್ಯಾರ್ಥಿನಿಯ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.
ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪರಾರಿಯಾಗಿರುವ ಆರೋಪಿಯ ಪತ್ತೆ ಹಾಗೂ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡ ರಚಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆ ಪೂರ್ಣಗೊಂಡ ಬಳಿಕವೇ ತಿಳಿದುಬರುವ ಸಾಧ್ಯತೆಯಿದೆ.





