ಮೈಸೂರು: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ, 'ಗಾನ ಕೋಗಿಲೆ' ಎಂದೇ ಜನಮನ ಗೆದ್ದಿದ್ದ ಎಸ್. ಜಾನಕಿ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆ ಭಾರತೀಯ ಸಂಗೀತ ಲೋಕಕ್ಕೆ ಅಪಾರ ನಷ್ಟವನ್ನುಂಟು ಮಾಡಿದ್ದು, ದೇಶಾದ್ಯಂತ ಸಂಗೀತಾಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
ಐದು ದಶಕಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ತಮ್ಮ ಅಪೂರ್ವ ಗಾಯನದ ಮೂಲಕ ಅಳಿಸಲಾಗದ ಛಾಪು ಮೂಡಿಸಿದ್ದ ಎಸ್. ಜಾನಕಿ ಅವರು ಸಾವಿರಾರು ಅಮರ ಗೀತೆಗಳಿಗೆ ಧ್ವನಿಯಾಗಿದ್ದರು. ಕನ್ನಡ ಸೇರಿದಂತೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿ, ಭಾರತೀಯ ಸಂಗೀತ ಇತಿಹಾಸದಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ.
ಅಸಂಖ್ಯಾತ ರಾಷ್ಟ್ರೀಯ ಹಾಗೂ ರಾಜ್ಯ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಎಸ್. ಜಾನಕಿ ಅವರ ಕಂಠಸಿರಿ ಹಲವು ತಲೆಮಾರುಗಳ ಸಂಗೀತಪ್ರಿಯರ ಮನಸ್ಸಿನಲ್ಲಿ ಸದಾ ಜೀವಂತವಾಗಿರಲಿದೆ. ಅವರ ನಿಧನದಿಂದ ಭಾರತೀಯ ಚಿತ್ರರಂಗ ಮತ್ತು ಸಂಗೀತ ಕ್ಷೇತ್ರವು ತನ್ನ ಅಮೂಲ್ಯ ರತ್ನವೊಂದನ್ನು ಕಳೆದುಕೊಂಡಂತಾಗಿದೆ





