ಬಂಟ್ವಾಳ: ಫರಂಗಿಪೇಟೆಯ ಮೆನೆಜಸ್ ಪ್ಲಾಜಾ ಕಟ್ಟಡದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಜುಲೈ 12ರ ರಾತ್ರಿ ವೇಳೆ ದುಷ್ಕರ್ಮಿಗಳು ಬ್ಯಾಂಕಿನ ಮೇಲ್ಛಾವಣಿಯನ್ನು ಕತ್ತರಿಸಿ ಒಳನುಗ್ಗಲು ಪ್ರಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿತ್ತು. ಮರುದಿನ ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿ ಶಾಖೆ ತೆರೆಯುವ ಸಂದರ್ಭದಲ್ಲಿ ಈ ಕೃತ್ಯ ಪತ್ತೆಯಾಗಿತ್ತು. ಪ್ರಾಥಮಿಕ ಪರಿಶೀಲನೆಯಲ್ಲಿ ಬ್ಯಾಂಕಿನಿಂದ ಯಾವುದೇ ಹಣ ಅಥವಾ ಬೆಲೆಬಾಳುವ ವಸ್ತುಗಳು ಕಳುವಾಗಿಲ್ಲ ಎಂಬುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬಂದ ಬಳಿಕ ಆರೋಪಿಗಳ ಪತ್ತೆಗಾಗಿ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ತಾಂತ್ರಿಕ ಮಾಹಿತಿಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಕೂಡ ಸಂಗ್ರಹಿಸಲಾಗುತ್ತಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ನಡೆಯುತ್ತಿದ್ದು, ತನಿಖೆಯ ಹಿತದೃಷ್ಟಿಯಿಂದ ಈ ಹಂತದಲ್ಲಿ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.





