17 July 2026 |

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಬ್ಬರ: ರಸ್ತೆ ಬದಿಯ ವಾಹನಗಳಿಗೆ ಡಿಕ್ಕಿ, ಮೂವರಿಗೆ ಗಾಯ

  • 16 Jul 2026 01:02:57 PM

ಬಂಟ್ವಾಳ: ತಾಲೂಕಿನ ಶಾಂತಿ ಅಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ವೇಗವಾಗಿ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಬಳಿಕ ಅಲ್ಲಿದ್ದ ಪಾದಚಾರಿಗಳಿಗೂ ಢಿಕ್ಕಿ ನೀಡಿದೆ ಎಂದು ತಿಳಿದುಬಂದಿದೆ.

 

ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸುತ್ತಮುತ್ತಲಿನವರು ತಕ್ಷಣ ಗಾಯಾಳುಗಳ ನೆರವಿಗೆ ಧಾವಿಸಿದರು. ಘಟನೆಯಲ್ಲಿ ಪಾದಚಾರಿಗಳಾಗಿದ್ದ ಫಾತಿಮಾ, ಅವರ ಪುತ್ರಿ ಸಲ್ಮೀಯಾ ಹಾಗೂ ಶೌಕತ್ ಅಲಿ ಗಾಯಗೊಂಡಿದ್ದಾರೆ.

 

ಗಾಯಾಳುಗಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

 

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಬಂಧಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರು ನಿಯಂತ್ರಣ ತಪ್ಪಲು ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.