ಮಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಕಟಿಸಿರುವ ಮೀಸಲಾತಿ ಪಟ್ಟಿಯಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗುವ ರೀತಿಯಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಮೀಸಲಾತಿ ಪಟ್ಟಿಯನ್ನು ಪರಿಶೀಲಿಸಿದಾಗ ಜನಪ್ರತಿನಿಧಿಗಳ ಅಭಿಪ್ರಾಯವನ್ನು ಪರಿಗಣಿಸದೆ ಮೀಸಲಾತಿ ನಿಗದಿಪಡಿಸಿರುವುದು ಕಂಡುಬಂದಿದೆ ಎಂದು ಹೇಳಿದರು.
ಈ ಕುರಿತು ಬಿಜೆಪಿ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎದುರಿಸಲು ಪಕ್ಷ ಸಂಪೂರ್ಣ ಸಜ್ಜಾಗಿದೆ ಎಂದು ಅವರು ತಿಳಿಸಿದರು.
ಚುನಾವಣಾ ಸಿದ್ಧತೆಯ ಭಾಗವಾಗಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಪ್ರತಾಪಸಿಂಹ ನಾಯಕ್, ಪ್ರೇಮಾನಂದ ಶೆಟ್ಟಿ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ 10 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದರು.





