17 July 2026 |

ಬಿ.ಸಿ.ರೋಡ್ ಯುವತಿ ಹತ್ಯೆ: ಬೆಳ್ತಂಗಡಿ ಯುವಕನ ಮೇಲೆ ಶಂಕೆ, ಏಕಪಕ್ಷೀಯ ಪ್ರೀತಿಯ ಸುಳಿವು

  • 16 Jul 2026 07:31:42 PM

ಬಂಟ್ವಾಳ: ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

ಮೃತರನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

 

ಸಂಜೆ ಸುಮಾರು 6 ಗಂಟೆ ವೇಳೆಗೆ ಲಾವಣ್ಯ ಅವರು ಬಸ್‌ಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ, ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದಾನೆ. ದಾಳಿಯ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

 

ಪ್ರಾಥಮಿಕ ವರದಿ ಪ್ರಕಾರ, ಕೊಲೆ ಮಾಡಿದ ಯುವಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪುರುಷೋತ್ತಮ ಗೌಡರ ಮಗ ಚೇತನ್ ಗೌಡ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ. ಕೊಲೆಯಾದ ಯುವತಿಯ ದೂರದ ಸಂಬಂಧಿಯಾಗಿದ್ದು ಏಕಪಕ್ಷೀಯ ಪ್ರೀತಿಗೆ (One Sided Love) ಈ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

 

ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಘಟನೆ ಬಿ.ಸಿ.ರೋಡ್ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

 

ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ. ವೈಯಕ್ತಿಕ ದ್ವೇಷ, ಪರಿಚಯದ ಹಿನ್ನೆಲೆ ಅಥವಾ ಇತರೆ ಕಾರಣಗಳ ಬಗ್ಗೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ಹೊರಬೀಳುವ ನಿರೀಕ್ಷೆಯಿದೆ.