ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ 25 ವರ್ಷದ ಲಾವಣ್ಯ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಬಳಿಕ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಇಡೀ ಕರಾವಳಿ ಭಾಗವನ್ನು ಬೆಚ್ಚಿಬೀಳಿಸಿದೆ. ಇಂತಹ ಅಮಾನವೀಯ ಕೃತ್ಯಕ್ಕೆ ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ರಾಜಕೀಯ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಮುಖಂಡ ಅರುಣ್ ಕುಮಾರ್ ಪುಟ್ಟಿಲ ಅವರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ, ಇಂತಹ ಕೃತ್ಯಗಳು ಕರಾವಳಿ ಭಾಗದಲ್ಲಿ ಮತ್ತೆ ಮರುಕಳಿಸದಂತೆ ಪೊಲೀಸರು ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಹೇಳಿಕೆಯಲ್ಲಿ ಆರೋಪಿಗೆ ಎನ್‌ಕೌಂಟರ್ ಅಥವಾ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ಮಾಜಿ ಸಚಿವ ಬಿ. ರಮಾನಾಥ ರೈ ಅವರು ಯುವತಿಯ ಹತ್ಯೆಯನ್ನು ಖಂಡಿಸಿ, ಆರೋಪಿಯ ವಿರುದ್ಧ ಕಾನೂನು ಪ್ರಕಾರ ಅತ್ಯಂತ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಕೂಡ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗೆ ಗಲ್ಲು ಶಿಕ್ಷೆ ಅಥವಾ ಎನ್‌ಕೌಂಟರ್ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ. ಇದೇ ವೇಳೆ, ಪ್ರಕರಣ ಖಂಡಿಸಿ ಸಾರ್ವಜನಿಕ ಪ್ರತಿಭಟನಾ ರ‍್ಯಾಲಿ ನಡೆಸುವ ಕುರಿತು ಸಂಘಟನೆಗಳು ಚಿಂತನೆ ನಡೆಸುತ್ತಿವೆ.
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಘಟನೆಯಿಂದ ತೀವ್ರ ಆಘಾತ ವ್ಯಕ್ತಪಡಿಸಿ, ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕೂಡ ಘಟನೆಯನ್ನು ತೀವ್ರವಾಗಿ ಖಂಡಿಸಿ, ಆರೋಪಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಪ್ರಕರಣದ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಕೆಲ ಬಳಕೆದಾರರು ಎನ್‌ಕೌಂಟರ್ ಅಥವಾ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸುತ್ತಿದ್ದಾರೆ.
ಲಾವಣ್ಯ ಅವರು ಕಲ್ಲಡ್ಕದ ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ದುಷ್ಕರ್ಮಿಯಿಂದ ಹಲ್ಲೆಗೊಳಗಾಗಿದ್ದು, ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.





