18 July 2026 |

ಕರಾವಳಿ ಜಿಲ್ಲೆಗಳಿಗೆ ಜುಲೈ 18-19ರಂದು ಭಾರಿ ಮಳೆ ಸಾಧ್ಯತೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

  • 17 Jul 2026 05:43:27 PM

ದಕ್ಷಿಣ ಕನ್ನಡ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಜುಲೈ 18 ಮತ್ತು 19ರಂದು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

 

ಮುನ್ಸೂಚನೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 18 ಹಾಗೂ 19ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

 

ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 18ರಂದು, ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 17 ಮತ್ತು 18ರಂದು ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಕೆಲವೆಡೆ ಗುಡುಗು-ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯೂ ಇದೆ.

 

ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನದಿಪಾತ್ರ ಪ್ರದೇಶಗಳು, ಗುಡ್ಡಗಾಡು ಪ್ರದೇಶಗಳು ಹಾಗೂ ತಗ್ಗು ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ. ಮೀನುಗಾರರು ಸಮುದ್ರಕ್ಕೆ ತೆರಳುವ ಮುನ್ನ ಹವಾಮಾನ ಮಾಹಿತಿ ಪರಿಶೀಲಿಸುವಂತೆ ಸೂಚಿಸಲಾಗಿದೆ.