21 July 2026 |

ಶಾಲೆಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ಜಂಕ್ ಫುಡ್‌ಗೆ ಬ್ರೇಕ್: ಸಚಿವ ಯು.ಟಿ. ಖಾದರ್

  • 19 Jul 2026 06:37:50 PM

ಮಂಗಳೂರು: ಬರ್ಗರ್, ಪಿಜ್ಜಾ ಸೇರಿದಂತೆ ಜಂಕ್ ಫುಡ್‌ಗಳ ಅತಿಯಾದ ಸೇವನೆಯಿಂದ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, 10ನೇ ತರಗತಿವರೆಗಿನ ಶಾಲೆಗಳು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಆಹಾರಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

 

ನಗರದ ವೆನ್‌ಲಾಕ್ ಆಸ್ಪತ್ರೆಯ RAPCC ಸಭಾಂಗಣದಲ್ಲಿ ಶನಿವಾರ ನಡೆದ ಆಸ್ಪತ್ರೆಗಳ ಅಭಿವೃದ್ಧಿ ಹಾಗೂ ಕುಂದುಕೊರತೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಹಾರ ಸುರಕ್ಷತೆಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಬೆಂಗಳೂರಿನ ಆಹಾರ ಪರೀಕ್ಷಾ ಪ್ರಯೋಗಾಲಯವನ್ನು ಆಧುನೀಕರಿಸಿ ಮೇಲ್ದರ್ಜೆಗೆ ಏರಿಸುವ ಯೋಜನೆಯೂ ಜಾರಿಯಲ್ಲಿದೆ ಎಂದು ಹೇಳಿದರು.

 

ಆಹಾರ ಉತ್ಪಾದನಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ದೊಡ್ಡ ಕಂಪನಿಗಳಾಗಲಿ ಅಥವಾ ಇತರ ಸಂಸ್ಥೆಗಳಾಗಲಿ, ಆಹಾರದ ಗುಣಮಟ್ಟದಲ್ಲಿ ಯಾವುದೇ ರೀತಿಯ ಲೋಪ ಕಂಡುಬಂದರೆ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಗತ್ಯ ದಾಖಲೆಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸಬಹುದಾದ ಅತ್ಯಾಧುನಿಕ ಪ್ರಯೋಗಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದರು.

 

ಈ ಪ್ರಯೋಗಾಲಯದ ವರದಿಗಳು ಕಾನೂನು ಮಟ್ಟದಲ್ಲಿಯೂ ಬಲವಾಗಿರುವಂತೆ ವ್ಯವಸ್ಥೆ ರೂಪಿಸಲಾಗುತ್ತಿದ್ದು, ಈ ಸಂಬಂಧ ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಚರ್ಚೆ ನಡೆಸಲಾಗಿದೆ ಎಂದು ಯು.ಟಿ. ಖಾದರ್ ಹೇಳಿದರು.