ಬಂಟ್ವಾಳ: ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕೊಡಂಗೆಯಲ್ಲಿರುವ ಹತ್ಯೆಗೀಡಾದ ಲಾವಣ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ವೇಳೆ ಲಾವಣ್ಯ ಅವರ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ ಇಬ್ಬರೂ ನಾಯಕರು, ದುರ್ಘಟನೆಯ ಕುರಿತು ಮಾಹಿತಿ ಪಡೆದು ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಆಗ್ರಹಿಸಿದರು.
ಈ ಕುರಿತು ರಾಜೇಶ್ ನಾಯ್ಕ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, ಘಟನೆ ನಡೆದ ಸಂದರ್ಭದಲ್ಲಿ ತಾವು ಒಡಿಶಾದ ಪುರಿ ಜಗನ್ನಾಥ ರಥೋತ್ಸವದಲ್ಲಿ ಭಾಗವಹಿಸುತ್ತಿದ್ದುದಾಗಿ ತಿಳಿಸಿದರು. ವಿಷಯ ತಿಳಿದ ತಕ್ಷಣವೇ ಪೊಲೀಸ್ ಅಧಿಕಾರಿಗಳಿಗೆ ಆರೋಪಿಯನ್ನು ಕೂಡಲೇ ಬಂಧಿಸಿ, ಸಮಗ್ರ ತನಿಖೆ ನಡೆಸಿ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾಗಿ ಹೇಳಿದ್ದಾರೆ.
“ಅಮಾಯಕ ಯುವತಿಯ ಜೀವ ಬಲಿ ಪಡೆದಿರುವ ಈ ಕೃತ್ಯ ಅತ್ಯಂತ ಖಂಡನೀಯ. ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು” ಎಂದು ಅವರು ತಿಳಿಸಿದ್ದಾರೆ.
ಭೇಟಿಯ ಅಂತ್ಯದಲ್ಲಿ ಲಾವಣ್ಯ ಅವರ ಆತ್ಮಕ್ಕೆ ಚಿರಶಾಂತಿ ಕೋರಿ, ದುಃಖಿತ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು.





