ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169 ವ್ಯಾಪ್ತಿಯ ಬನ್ನಡ್ಕದಲ್ಲಿ ಬಹುಕಾಲದಿಂದ ಬಾಕಿ ಉಳಿದಿದ್ದ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಸೂಚನೆ ನೀಡಲಾಗಿದೆ.
ಬನ್ನಡ್ಕದಲ್ಲಿ ಸುಮಾರು 700 ಮೀಟರ್ ಉದ್ದದ ಸರ್ವಿಸ್ ರಸ್ತೆ ನಿರ್ಮಾಣವಾಗದೇ ಉಳಿದಿದ್ದ ಹಿನ್ನೆಲೆಯಲ್ಲಿ, ಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರು.
ಸಂಸದರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಹೆದ್ದಾರಿ ಸಚಿವಾಲಯ, ಸಚಿವರ ನಿರ್ದೇಶನದಂತೆ ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಿ, ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ.
ಬನ್ನಡ್ಕವು ಮಂಗಳೂರು–ಮೂಡುಬಿದಿರೆ ನಡುವಿನ ರಾಷ್ಟ್ರೀಯ ಹೆದ್ದಾರಿ 169ರ ಪ್ರಮುಖ ಭಾಗವಾಗಿದ್ದು, ಸರ್ವಿಸ್ ರಸ್ತೆ ಇಲ್ಲದ ಕಾರಣ ಸ್ಥಳೀಯ ವಾಹನಗಳು ಹಾಗೂ ಪಾದಚಾರಿಗಳು ನೇರವಾಗಿ ಹೆದ್ದಾರಿಗೆ ಪ್ರವೇಶಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದಾಗಿ ಈ ಪ್ರದೇಶದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವುದರ ಜೊತೆಗೆ ಅಪಘಾತಗಳ ಅಪಾಯವೂ ಹೆಚ್ಚುತ್ತಿತ್ತು.
ಈ ಹಿನ್ನೆಲೆಯಲ್ಲಿ ಸ್ಥಳೀಯರು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಹಲವು ಬಾರಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿದ್ದರು. ಇದೀಗ ಕೇಂದ್ರ ಹೆದ್ದಾರಿ ಸಚಿವಾಲಯದಿಂದ ಅನುಮೋದನೆ ದೊರೆತಿರುವುದು ಬನ್ನಡ್ಕ ಹಾಗೂ ಸುತ್ತಮುತ್ತಲಿನ ಜನರಿಗೆ ಮಹತ್ವದ ಬೆಳವಣಿಗೆಯಾಗಿದೆ. ಸರ್ವಿಸ್ ರಸ್ತೆ ನಿರ್ಮಾಣದಿಂದ ಸ್ಥಳೀಯ ಸಂಚಾರ ಸುಗಮವಾಗುವುದರ ಜೊತೆಗೆ ರಸ್ತೆ ಸುರಕ್ಷತೆಯೂ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.





