ನವದೆಹಲಿ: ನೀಟ್ ಪರೀಕ್ಷೆ ಅಕ್ರಮ ಪ್ರಕರಣ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗಳ ಹಿನ್ನೆಲೆದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ನಡೆಸಿದ ಧರಣಿಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಧರ್ಮೇಂದ್ರ ಪ್ರಧಾನ್, ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಹಾಗೂ ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಗೊಂದಲದ ವಾತಾವರಣ ನಿರ್ಮಿಸಲು ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ರಾಜಕೀಯ ಸಾಧನವಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಾಜಕೀಯಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.
ಸರ್ಕಾರ ಯಾವುದೇ ವಿಷಯದ ಕುರಿತು ಪ್ರಜಾಸತ್ತಾತ್ಮಕ ಚರ್ಚೆಗೆ ಸಿದ್ಧವಾಗಿದ್ದರೂ, ಕಾಂಗ್ರೆಸ್ ಸಮಸ್ಯೆಗಳ ಪರಿಹಾರಕ್ಕಿಂತ ರಾಜಕೀಯ ಪ್ರದರ್ಶನಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಸಚಿವರು ಟೀಕಿಸಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ಬದಲು ರಾಜಕೀಯ ಪ್ರಚಾರ ಪಡೆಯುವುದೇ ಕಾಂಗ್ರೆಸ್‌ನ ಉದ್ದೇಶ ಎಂದು ಅವರು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಗೊಂದಲವಲ್ಲ, ಸ್ಪಷ್ಟತೆ ಮತ್ತು ವಿಶ್ವಾಸ ಅಗತ್ಯ. ಘೋಷಣೆಗಳಿಗಿಂತ ಪರಿಣಾಮಕಾರಿ ಪರಿಹಾರಗಳು ಮುಖ್ಯ. ಅಡ್ಡಿಪಡಿಸುವ ರಾಜಕೀಯಕ್ಕಿಂತ ಜವಾಬ್ದಾರಿಯುತ ನಡೆ ಬೇಕಾಗಿದೆ ಎಂದು ಪ್ರಧಾನ್ ಅಭಿಪ್ರಾಯಪಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ನಿಖರ ಉತ್ತರಗಳು, ಅಗತ್ಯ ಸುಧಾರಣೆಗಳು ಹಾಗೂ ಹೊಣೆಗಾರ ಆಡಳಿತ ಒದಗಿಸುವ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
ಇದಲ್ಲದೆ, ಪ್ರಧಾನಿ ನಿವಾಸದ ಎದುರು ನಡೆದ ಧರಣಿಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು, ಭದ್ರತಾ ನಿಯಮಗಳ ಉಲ್ಲಂಘನೆಯೂ ನಡೆದಿದೆ ಎಂದು ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ.





