06 August 2026 |

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯ; ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವವರಿಗೆ ಬಿಡುವಿಲ್ಲ: ಪ್ರಧಾನಿ ಮೋದಿ

  • 23 Jul 2026 11:59:22 AM

ನವದೆಹಲಿ: ಪರೀಕ್ಷಾ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ತ್ವರಿತ ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

 

ದೇಶದ ವಿವಿಧ ಭಾಗಗಳಲ್ಲಿ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ತೀವ್ರಗೊಂಡಿರುವ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಎಕ್ಸ್‌ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

 

ಯುವಜನರ ಭವಿಷ್ಯ ಮತ್ತು ಅವರ ಕಲ್ಯಾಣವೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತೊಡಗಿರುವ ಆರೋಪಿಗಳಿಗೆ ಶೀಘ್ರ ವಿಚಾರಣೆ ನಡೆಸಿ ಕಠಿಣ ಶಿಕ್ಷೆ ನೀಡುವ ವ್ಯವಸ್ಥೆ ಕಲ್ಪಿಸಲು ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 

ಈ ಸಂಬಂಧ ಅಗತ್ಯವಿರುವ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳನ್ನು ತಕ್ಷಣ ಜಾರಿಗೊಳಿಸುವಂತೆ ಸಂಬಂಧಿತ ಇಲಾಖೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮೋದಿ ಹೇಳಿದ್ದಾರೆ.

 

ವಿದ್ಯಾರ್ಥಿಗಳು ಮತ್ತು ಯುವಕರ ಭವಿಷ್ಯಕ್ಕೆ ಧಕ್ಕೆ ತರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ಯಾವುದೇ ಸಂದರ್ಭದಲ್ಲೂ ಸಹಿಸುವುದಿಲ್ಲ ಹಾಗೂ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.