24 July 2026 |

ಭೀಕರ ಮಳೆ: ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

  • 24 Jul 2026 12:33:32 AM

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು (IMD) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 24ರ ಶುಕ್ರವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಜೊತೆಗೆ ಎಲ್ಲಾ ಪದವಿಪೂರ್ವ (ಪಿಯು) ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. 

 

ಈ ಕುರಿತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಎಚ್ಚರಿಕೆಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.

 

ಪೋಷಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಪ್ರವಾಹಪೀಡಿತ ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸುವಂತೆ ಹಾಗೂ ಜಿಲ್ಲಾಡಳಿತ ಮತ್ತು ಹವಾಮಾನ ಇಲಾಖೆಯಿಂದ ಹೊರಡಿಸುವ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.