06 August 2026 |

ಕಾಣೆಯಾಗಿದ್ದ ಅಪ್ರಾಪ್ತೆ ಪತ್ತೆ; ಪೋಕ್ಸೊ ಪ್ರಕರಣದಲ್ಲಿ ಯುವಕ ಬಂಧನ

  • 24 Jul 2026 10:34:46 AM

ಸುಳ್ಯ: ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದ್ದು, ಆಕೆ ನೀಡಿದ ದೂರಿನ ಆಧಾರದ ಮೇಲೆ ಕಡಬ ಮೂಲದ ಯುವಕನನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಲಾಗಿದೆ.

 

ಪೊಲೀಸರ ಮಾಹಿತಿ ಪ್ರಕಾರ, ಮೇ 7ರಂದು ಬಾಲಕಿ ಮಂಗಳೂರಿಗೆ ಕೆಲಸಕ್ಕೆ ಹೋಗುತ್ತಿರುವುದಾಗಿ ಮನೆಯವರಿಗೆ ತಿಳಿಸಿ ಮನೆಯಿಂದ ಹೊರಟಿದ್ದಳು. ನಂತರ ಮನೆಗೆ ವಾಪಸ್ ಬಾರದ ಕಾರಣ ಆತಂಕಗೊಂಡ ಕುಟುಂಬದವರು ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಕುರಿತು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

 

ನಿರಂತರ ತನಿಖೆಯ ಫಲವಾಗಿ ಜುಲೈ 22ರಂದು ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿದರು. ಬಳಿಕ ಆಕೆಯಿಂದ ದಾಖಲಿಸಿದ ಹೇಳಿಕೆಯಲ್ಲಿ, ಕಡಬ ನಿವಾಸಿ ಧನುಷ್ (18) ತನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

 

ಬಾಲಕಿಯ ದೂರಿನ ಆಧಾರದ ಮೇಲೆ ಈಗಾಗಲೇ ದಾಖಲಾಗಿದ್ದ ಪ್ರಕರಣಕ್ಕೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯ್ದೆ (POCSO)ಯ ಕಲಂ 5(1) ಮತ್ತು 6 ಅನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ.

 

ಪ್ರಕರಣ ಸಂಬಂಧ ಜುಲೈ 22ರಂದು ಆರೋಪಿತ ಧನುಷ್‌ನನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.