06 August 2026 |

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು ಭರವಸೆ: 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಟುಕ್

  • 24 Jul 2026 11:44:09 AM

ನವದೆಹಲಿ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ ಬೆನ್ನಲ್ಲೇ, ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಸೋನಂ ವಾಂಗ್ಟುಕ್ ತಮ್ಮ 26 ದಿನಗಳ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದರು.

 

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗಳಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಇದರ ನಂತರ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಸೋನಂ ವಾಂಗ್ಟುಕ್ ಉಪವಾಸವನ್ನು ಮುಕ್ತಾಯಗೊಳಿಸಿದರು.

 

ಉಪವಾಸ ಅಂತ್ಯಗೊಳಿಸಿದ ಬಳಿಕ ಪ್ರತಿಕ್ರಿಯಿಸಿದ ಸೋನಂ ವಾಂಗ್ಟುಕ್, ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ ಬಳಿಕ ಹಾಗೂ ದೇಶದಲ್ಲಿ ಯಾವುದೇ ರೀತಿಯ ಅಶಾಂತಿ ಉಂಟಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.

 

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡ ಅವರು, ವಿವಿಧ ರಾಜಕೀಯ ಪಕ್ಷಗಳಿಗೆ ಸೇರಿದ 65 ಸಂಸದರು ಉಪವಾಸ ಕೈಬಿಡುವಂತೆ ಮನವಿ ಮಾಡಿದ್ದರು ಎಂದು ತಿಳಿಸಿದ್ದಾರೆ. ಜೊತೆಗೆ, ಎಲ್ಲರೂ ಶಾಂತಿ ಕಾಪಾಡಿಕೊಂಡು ಯಾವುದೇ ರೀತಿಯ ಹಿಂಸಾಚಾರಕ್ಕೆ ಅವಕಾಶ ನೀಡಬಾರದು ಎಂದು ಸಾರ್ವಜನಿಕರಿಗೆ ಕರೆ ನೀಡಿದರು.