ಕಲ್ಲಡ್ಕ: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿಯಲ್ಲಿ ಜುಲೈ 22ರಂದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಪುಟಾಣಿ ಬಾಲಕಿ ಚಿರನ್ವಿ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ, ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ವತಿಯಿಂದ ಗುರುವಾರ ನುಡಿನಮನ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಚಿರನ್ವಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಪದವಿ ವಿಭಾಗದ ಉಪಪ್ರಾಂಶುಪಾಲ ಯತಿರಾಜ್ ಪಿ. ಅವರು ಮಾತನಾಡಿ, ಬಾಲಕಿಯ ಅಕಾಲಿಕ ನಿಧನವು ಎಲ್ಲರ ಮನಸ್ಸನ್ನು ತೀವ್ರವಾಗಿ ನೋಯಿಸಿದ್ದು, ಇಂತಹ ದುರ್ಘಟನೆ ಮತ್ತೆ ಸಂಭವಿಸದಿರಲಿ ಎಂದು ಆಶಿಸಿದರು.
ಚಿರನ್ವಿ ಅವರ ದಿವ್ಯಾತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಒಂದು ನಿಮಿಷ ಮೌನಾಚರಣೆ ನಡೆಸಿ, ಪುಟಾಣಿ ಚಿರನ್ವಿ ಅವರ ಆತ್ಮಕ್ಕೆ ಶಾಂತಿ ಕೋರಿ ನಮನ ಸಲ್ಲಿಸಿದರು.





