ಮಂಗಳೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಒತ್ತಾಯಿಸಿ, ಮಂಗಳೂರಿನಲ್ಲಿ ಶುಕ್ರವಾರ ನೂರಾರು ವಿದ್ಯಾರ್ಥಿಗಳು, ಯುವಕರು, ಪೋಷಕರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸಿದರು.
ಹಂಪನಕಟ್ಟೆ ಸಿಗ್ನಲ್‌ನಿಂದ ಟೌನ್‌ಹಾಲ್‌ವರೆಗೆ ನಡೆದ ಈ ಶಾಂತಿಯುತ ಪಾದಯಾತ್ರೆಯಲ್ಲಿ ಪ್ರತಿಭಟನಾಕಾರರು ಕೈಯಲ್ಲಿ ಫಲಕಗಳನ್ನು ಹಿಡಿದು “We Want Justice”, “Our Dreams Are Not For Sale” ಹಾಗೂ “Education, Not Corruption” ಎಂಬ ಘೋಷಣೆಗಳನ್ನು ಕೂಗಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ದೇಶಾದ್ಯಂತ ನಡೆಯುತ್ತಿರುವ ನೀಟ್ ಹಗರಣ ವಿರೋಧಿ ಚಳವಳಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಆಯೋಜಿಸಲಾದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮಾತ್ರವಲ್ಲದೆ ವಿವಿಧ ಕ್ಷೇತ್ರಗಳ ನಾಗರಿಕರು ಸಹ ಭಾಗವಹಿಸಿದರು. ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸಲು ಕೇಂದ್ರ ಸರ್ಕಾರ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ಸಾಗಿದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ಪ್ರತಿಭಟನೆ ಶಾಂತಿಯುತವಾಗಿ ಅಂತ್ಯಗೊಂಡಿತು.





