06 August 2026 |

ಕೊಡಗಿನಲ್ಲಿ ಕೊರೋಣ ಮುನ್ನೆಚ್ಚರಿಕೆ ಬಿಗಿ: ಜಿಲ್ಲಾ ಆಸ್ಪತ್ರೆಯಲ್ಲಿ 40 ಹಾಸಿಗೆಗಳ ಮೀಸಲು

  • 27 Jul 2026 11:16:03 AM

ಮಡಿಕೇರಿ: ಆಂಧ್ರಪ್ರದೇಶ ಹಾಗೂ ಬೆಂಗಳೂರಿನಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ಕೋವಿಡ್ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾ ಆಸ್ಪತ್ರೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.

 

ದೇಶದ ಕೆಲವು ಪ್ರದೇಶಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಅದರಂತೆ ಕೊಡಗು ಜಿಲ್ಲೆಯಲ್ಲೂ ಅಧಿಕಾರಿಗಳ ಸಭೆ ನಡೆಸಿ ಆಸ್ಪತ್ರೆಗಳ ಸಿದ್ಧತೆಯ ಕುರಿತು ಪರಿಶೀಲನೆ ನಡೆಸಲಾಗಿದೆ.

 

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಐಸೋಲೇಷನ್ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆಗಾಗಿ ಒಟ್ಟು 40 ಹಾಸಿಗೆಗಳನ್ನು ಮೀಸಲಿರಿಸಲಾಗಿದ್ದು, ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಸೌಲಭ್ಯ ಕಲ್ಪಿಸಲಾಗಿದೆ.

 

ಇದರ ಜೊತೆಗೆ ಪಿಪಿಇ ಕಿಟ್‌, ಎನ್-95 ಮಾಸ್ಕ್‌, ಅಗತ್ಯ ಔಷಧಿಗಳು, ಸ್ಯಾನಿಟೈಸರ್ ಸೇರಿದಂತೆ ಕೋವಿಡ್ ಚಿಕಿತ್ಸೆಗೆ ಬೇಕಾದ ಎಲ್ಲಾ ವೈದ್ಯಕೀಯ ಸಾಮಗ್ರಿಗಳನ್ನು ಆಸ್ಪತ್ರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ.

 

ಜ್ವರ, ಕೆಮ್ಮು, ಗಂಟಲು ನೋವು ಅಥವಾ ಉಸಿರಾಟದ ತೊಂದರೆ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ವೈರಲ್ ಜ್ವರದ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ಬರುವವರಿಗೂ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

 

ಕೋವಿಡ್ ಸೋಂಕಿನ ಶಂಕಿತ ಲಕ್ಷಣಗಳು ಕಂಡುಬಂದರೆ ತಕ್ಷಣ ಪರೀಕ್ಷೆ ನಡೆಸಿ, ಅಗತ್ಯವಿದ್ದಲ್ಲಿ ಪ್ರತ್ಯೇಕ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನೂ ಸಜ್ಜುಗೊಳಿಸಲಾಗಿದೆ.

 

ಮೊದಲ ಹಾಗೂ ಎರಡನೇ ಕೋವಿಡ್ ಅಲೆಯ ಅನುಭವವನ್ನು ಆಧಾರವಾಗಿಸಿಕೊಂಡು ಈ ಬಾರಿಯೂ ಆರೋಗ್ಯ ಇಲಾಖೆ ಸಂಪೂರ್ಣ ಸಿದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು ಅನಗತ್ಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆದರೆ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.