ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಸಮೀಪ ಖಾಸಗಿ ತಡೆರಹಿತ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪುಟ್ಟ ಮಕ್ಕಳು ಹಾಗೂ ಚಾಲಕ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಮುಲ್ಕಿ ಬಸ್ ನಿಲ್ದಾಣದ ಬಳಿ ತಲುಪಿದ ವೇಳೆ, ಚಾಲಕನ ಅಜಾಗರೂಕ ಚಾಲನೆಯಿಂದ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಘಟನೆಯ ಬಳಿಕ ಬಸ್ ಮತ್ತು ಕಾರು ಚಾಲಕರ ನಡುವೆ ಮಾತಿನ ಚಕಮಕಿ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಪಘಾತಕ್ಕೀಡಾದ ಎರಡೂ ವಾಹನಗಳನ್ನು ರಸ್ತೆದಿಂದ ತೆರವುಗೊಳಿಸಿದರು.
ಈ ಸಂಬಂಧ ಕಾರು ಚಾಲಕ ದೀರಜ್ ಶೆಟ್ಟಿ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.





