ಮಂಗಳೂರು: ನಗರದ ಹಂಪನಕಟ್ಟೆ ಪ್ರದೇಶದಲ್ಲಿರುವ ಶೂ ಅಂಗಡಿಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಬೆಂಕಿ ಅವಘಡದಿಂದ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿ ಪಕ್ಕದಲ್ಲಿದ್ದ ಇನ್ನೆರಡು ಅಂಗಡಿಗಳಿಗೂ ತಗುಲಿದೆ. 'ಯುರೋಪ್' ಹೆಸರಿನ ಶೂ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಒಳಗಿದ್ದ ವಸ್ತುಗಳು ಸಂಪೂರ್ಣ ನಾಶವಾಗಿವೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ಆರಂಭಿಸಿದರು. ಸದ್ಯ ಬೆಂಕಿಯನ್ನು ನಂದಿಸುವ ಕಾರ್ಯ ಮುಂದುವರಿದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ವ್ಯಕ್ತವಾಗಿದೆ. ಈ ದುರ್ಘಟನೆಯಿಂದ ಅಂಗಡಿಗೆ ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿದ್ದು, ನಷ್ಟದ ನಿಖರ ಮೌಲ್ಯ ಇನ್ನಷ್ಟೇ ತಿಳಿದುಬರಬೇಕಿದೆ.





