ಪುತ್ತೂರು: ತಾಲೂಕಿನ ಬಲ್ನಾಡು ಗ್ರಾಮದ ಆನಂದ ಸಾಗರ ಸಮೀಪದ ದೊಡ್ಡ ತಿರುವಿನಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐದು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಮಾಹಿತಿಯ ಪ್ರಕಾರ, ರಾಮಕುಂಜ ಶಾಲೆಯ ವಿದ್ಯಾರ್ಥಿಗಳು ಬಲ್ನಾಡಿನ ಮೊರಾರ್ಜಿ ದೇಸಾಯಿ ಶಾಲೆಗೆ ತೆರಳಿ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಐವರು ವಿದ್ಯಾರ್ಥಿಗಳು ಪಲ್ಟಿಯ ಪರಿಣಾಮ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.
ಅಪಘಾತದ ತಕ್ಷಣ ಸ್ಥಳೀಯರು ಮತ್ತು ಸಾರ್ವಜನಿಕರು ಗಾಯಾಳು ಮಕ್ಕಳ ನೆರವಿಗೆ ಧಾವಿಸಿದ್ದು, ಅವರನ್ನು ಕೂಡಲೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರ ಮಾಹಿತಿ ಪ್ರಕಾರ, ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಘಟನೆ ನಡೆದ ಆನಂದ ಸಾಗರದ ದೊಡ್ಡ ತಿರುವು ಅಪಘಾತಗಳಿಗೆ ಹೆಸರಾದ ಸ್ಥಳವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೇ ಭಾಗದಲ್ಲಿ ಈ ಹಿಂದೆಯೂ ಹಲವು ರಸ್ತೆ ಅಪಘಾತಗಳು ಸಂಭವಿಸಿರುವ ಹಿನ್ನೆಲೆಯಲ್ಲಿ, ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಚ್ಚರಿಕೆ ಫಲಕಗಳನ್ನು ಅಳವಡಿಸುವುದು, ವೇಗ ನಿಯಂತ್ರಣ ವ್ಯವಸ್ಥೆ ಜಾರಿಗೊಳಿಸುವುದು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.





