ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ಶುಕ್ರವಾರ (ಜುಲೈ 31) ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ಉದ್ಯಮಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಬಾರ್ಕೂರು ಕಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನ್ಹಾಸ್ (45) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಮುಂಜಾನೆ ಸುಮಾರು 3.30ರ ವೇಳೆಗೆ ಐವನ್ ಅವರು ಕಾರಿನಲ್ಲಿ ಮಹಿಳೆಯೊಬ್ಬರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದು, ಆತನ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಈ ಹತ್ಯೆ ಹಣಕಾಸು ಅಥವಾ ವ್ಯವಹಾರ ಸಂಬಂಧಿತ ವೈಷಮ್ಯದ ಹಿನ್ನೆಲೆಯಿಂದ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





