ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರೊಬ್ಬರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ, ಅಶ್ಲೀಲ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ₹1 ಕೋಟಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದಡಿ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಿ, ಇರುವೇಲ್ ನಿವಾಸಿ ಅಕ್ಷಯ್ ಹಾಗೂ ಪಡೀಲ್‌ನ ಶ್ರೇಯಸ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಶಾಸಕರ ಮಾನಹಾನಿ ಮಾಡುವ ಉದ್ದೇಶದಿಂದ ಅಶ್ಲೀಲ ವಿಡಿಯೋ ತಮ್ಮ ಬಳಿ ಇದೆ ಎಂದು ಆರೋಪಿಗಳು ಹೇಳಿಕೊಂಡು, ಅದನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಸಿ ₹1 ಕೋಟಿ ಹಣ ನೀಡುವಂತೆ ಒತ್ತಾಯಿಸಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹನಿಟ್ರ್ಯಾಪ್ ಸಂಚಿನಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಮತ್ತು ಪ್ರಕರಣದ ಹಿಂದೆ ಇರುವ ಸಂಪೂರ್ಣ ಹಿನ್ನೆಲೆ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.





