ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶುಕ್ರವಾರ ರಾತ್ರಿ ಆರಂಭವಾದ ಭಾರೀ ಮಳೆ ಶನಿವಾರವೂ ನಿರಂತರವಾಗಿ ಸುರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಬೆಳಗ್ಗೆಯಿಂದಲೇ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಕೆಲಸಕ್ಕೆ ಹಾಗೂ ಇತರ ಅಗತ್ಯ ಕಾರ್ಯಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಂಕಷ್ಟ ಎದುರಿಸಿದರು. ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ದಟ್ಟಣೆಯೂ ಕಂಡುಬಂದಿತು.
ಮಳೆಯ ತೀವ್ರತೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅವರು ಇಂದು (ಆಗಸ್ಟ್ 1) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಇದೇ ಆದೇಶದಂತೆ ಜಿಲ್ಲೆಯ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೂ ರಜೆ ನೀಡಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನೇತ್ರಾವತಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದ್ದು, ನದಿ ತೀರದ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.





