ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 3, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಮಂಗಳೂರು, ಉಳ್ಳಾಲ, ಮೂಲ್ಕಿ, ಬಂಟ್ವಾಳ ಹಾಗೂ ಮೂಡುಬಿದಿರೆ ತಾಲ್ಲೂಕುಗಳಲ್ಲಿ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲ್ಲೂಕುಗಳಲ್ಲಿ ದ್ವಿತೀಯ ಪಿಯುಸಿ, ಡಿಪ್ಲೊಮಾ ಮತ್ತು ಐಟಿಐ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಕಾಸರಗೋಡು ಜಿಲ್ಲೆ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಕೊಪ್ಪ ಶೃಂಗೇರಿ ತಾಲ್ಲೂಕುಗಳಲ್ಲಿಯೂ ರಜೆ ಘೋಷಣೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿಲ್ಲದಿದ್ದರೆ ನದಿಗಳು, ಹೊಳೆಗಳು ಹಾಗೂ ತಗ್ಗು ಪ್ರದೇಶಗಳತ್ತ ತೆರಳಬಾರದು ಎಂದು ಸೂಚಿಸಲಾಗಿದೆ.
ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದ 1077 ಟೋಲ್-ಫ್ರೀ ಸಹಾಯವಾಣಿ ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.





