ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಆ. 4ರಂದು ವಿವಿಧ ತಾಲೂಕುಗಳ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಮತ್ತು ಜಿಲ್ಲೆಯಲ್ಲಿ ಮುಂದುವರಿದಿರುವ ಮಳೆಯ ಪರಿಸ್ಥಿತಿಯನ್ನು ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಹಾಗೂ ಮುಲ್ಕಿ ಸೇರಿದಂತೆ ಉಳ್ಳಾಲ ತಾಲೂಕಿನ 10ನೇ ತರಗತಿ ತನಕದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಒಂದು ದಿನದ ರಜೆ ಅನ್ವಯವಾಗಲಿದೆ. ಈ ತಾಲೂಕುಗಳ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಇದೇ ವೇಳೆ ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರುವುದರಿಂದ ಎಲ್ಲಾ ಶಾಲೆಗಳ ಜೊತೆಗೆ ಪದವಿ ಪೂರ್ವ ಕಾಲೇಜುಗಳು (PUC), ಡಿಪ್ಲೊಮಾ ಹಾಗೂ ಐಟಿಐ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದೆ. ಮಳೆಯ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳ ಕುರಿತು ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದೆ.





