ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಚೇರಿ ಆವರಣದ ಬಳಿ 2015ರ ಜುಲೈ 23ರಂದು ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹಾಗೂ ಸಮಾಜದಲ್ಲಿ ವೈಮನಸ್ಸು ಮೂಡಿಸುವ ರೀತಿಯಲ್ಲಿ ಭಾಷಣ ಮಾಡಲಾಗಿದೆ ಎಂಬ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಪ್ರಕರಣದ ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಕಲಂ 153(A) ಹಾಗೂ 295(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರತಿಭಟನೆ ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬೆಳ್ತಂಗಡಿ ವಲಯದ ವತಿಯಿಂದ ಆಯೋಜಿಸಲಾಗಿತ್ತು ಎಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.
ಅಂದಿನ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್. ಅವರು ಪ್ರಕರಣದ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಗಳು ಸಾಬೀತಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ಮಾನ್ಯ ನ್ಯಾಯಾಧೀಶ ರಾಮಲಿಂಗಪ್ಪ ಅವರು ಕಲಂ 153(A) ಅಡಿಯಲ್ಲಿ ಆರೋಪಿಗೆ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶ ನೀಡಿದ್ದಾರೆ.





