06 August 2026 |

ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ; ರ‍್ಯಾಗಿಂಗ್ ಶಂಕೆಯಲ್ಲಿ ಪೊಲೀಸರ ತನಿಖೆ

  • 05 Aug 2026 10:26:08 AM

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಘಟನೆ ರ‍್ಯಾಗಿಂಗ್‌ಗೆ ಸಂಬಂಧಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಎಲ್ಲಾ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದ್ದಾರೆ.

 

ಮಂಗಳೂರಿನ ಗುಜ್ಜರಕೆರೆ ಸಮೀಪದ ಚಹಾ ಅಂಗಡಿಯ ಬಳಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಹಲ್ಲೆಯಿಂದ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

 

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲ್ಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಯ ನಿಖರ ಹಿನ್ನೆಲೆ ಬಹಿರಂಗವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿ, ಪ್ರಾಥಮಿಕ ಮಾಹಿತಿ ಆಧರಿಸಿ ಇದು ರ‍್ಯಾಗಿಂಗ್‌ಗೆ ಸಂಬಂಧಿಸಿದ ಪ್ರಕರಣವಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹೇಳಿಕೆ, ಲಭ್ಯವಿರುವ ಸಾಕ್ಷ್ಯಗಳು ಹಾಗೂ ಇತರೆ ಮಾಹಿತಿಗಳನ್ನು ಸಂಗ್ರಹಿಸಿ ಸಮಗ್ರ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.