07 August 2026 |

ನಿಶಾನಾ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹3 ಲಕ್ಷ: ನ್ಯಾಯಸಮ್ಮತ ತನಿಖೆಗೆ ಶಾಸಕ ಅಶೋಕ್ ರೈ ಮನವಿ

  • 06 Aug 2026 07:16:38 PM

ಪುತ್ತೂರು: ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನಾ ಅವರ ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹3 ಲಕ್ಷ ನೆರವು ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

 

ಜುಲೈ 18ರಂದು ಗಂಡನ ಮನೆಯಲ್ಲಿ ನಿಶಾನಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಶಾಸಕ ಅಶೋಕ್ ರೈ, ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

 

ನಿಶಾನಾ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ ಮೂರು ವರ್ಷದ ಮಗು ಇರುವುದರಿಂದ ಕುಟುಂಬದ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಯಿತು. ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹3 ಲಕ್ಷ ಆರ್ಥಿಕ ನೆರವು ಮಂಜೂರು ಮಾಡಿದ್ದಾರೆ.

 

ಅಧಿಕೃತ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಮಂಜೂರಾದ ಪರಿಹಾರದ ಮೊತ್ತವನ್ನು ಶೀಘ್ರದಲ್ಲೇ ನಿಶಾನಾ ಅವರ ಕುಟುಂಬದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.