ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗುರುವಾರ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಮಾಡಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ.
ಕೃತಿ ಮಾಡೆಲಿಂಗ್ ಕ್ಷೇತ್ರದಲ್ಲಿ ಪರಿಚಿತರಾಗಿದ್ದು, ಉಡುಪಿಯ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಉದ್ಯೋಗದಲ್ಲಿದ್ದರು. ಆದರೆ ಕಳೆದ ಐದು ತಿಂಗಳಿನಿಂದ ಅವರು ಕೆಲಸದಿಂದ ದೂರವಿದ್ದು ಮನೆಯಲ್ಲೇ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಲಭ್ಯವಾದ ಪ್ರಾಥಮಿಕ ಮಾಹಿತಿಯಂತೆ, ಕೃತಿ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ತಮ್ಮ ಮನೆಯ ಮಲಗುವ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





