08 August 2026 |

ಪಡುಬಿದ್ರಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಮೇಲೆ ಗುಂಡಿನ ದಾಳಿ; ಆಸ್ಪತ್ರೆಗೆ ಸಾಗಿಸುವಾಗ ಸಾವು

  • 07 Aug 2026 07:06:31 PM

ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

 

ಮಾಹಿತಿಯ ಪ್ರಕಾರ, ಕಾರಿನಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ಡೇವಿಡ್ ಡಿಸೋಜ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
 

ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

 

ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಮತ್ತು ಬಂಧನಕ್ಕಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಹತ್ಯೆಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚಲು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

 

ಈ ಘಟನೆ ಬಳಿಕ ಪಡುಬಿದ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ.